ಉತ್ತರಪ್ರದೇಶ: ಮತ್ತೆ ಎರಡು ಸ್ಥಳಗಳಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸ ಮಾಡಿದ ಕಿಡಿಗೇಡಿಗಳು!
ನ್ಯೂಸ್ ಕನ್ನಡ ವರದಿ-(07.04.18): ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅಲ್ಪಸಂಖ್ಯಾತರ ಮತ್ತು ದಲಿತರ ಮೇಲಿನ ದಾಳಿಗಳು ಹೆಚ್ಚಾಗಿವೆ. ತ್ರಿಪುರಾದಲ್ಲಿ ಬಿಜೆಪಿ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಅಲ್ಲಿ ಲೆನಿನ್ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು. ಬಳಿಕ ತಮಿಳುನಾಡಿನ ಪೆರಿಯಾರ್, ಸಂವಿಧಾನಶಿಲ್ಪಿ ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆಯನ್ನೂ ಧ್ವಂಸ ಮಾಡಲಾಗಿತ್ತು. ಇದೀಗ ಅಂಬೇಡ್ಕರ್ ಪ್ರತಿಮೆ ಧ್ವಂಸವು ಅವ್ಯಾಹತವಾಗಿ ನಡೆಯುತ್ತಿದೆ. ಉತ್ತರಪ್ರದೇಶದ ಬುಡೌನ್ ಹಾಗೂ ಬಲಿಯಾ ಜಿಲ್ಲೆಗಳಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ.
ಬಲಿಯಾ ಜಿಲ್ಲೆಯ ದೇದ್ವಾರಿ ಗ್ರಾಮದಲ್ಲಿದ್ದ ಅಂಬೇಡ್ಕರ್ ಪ್ರತಿಮೆಗೆ ಭಾಗಶಃ ಹಾನಿಯಾಗಿದ್ದು, ಪ್ರತಿಮೆಯ ಬಲಗೈ, ಕಾಲು ಮತ್ತು ತಲೆಯ ಭಾಗವನ್ನು ಧ್ವಂಸಗೊಳಿಸಲಾಗಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸುತ್ತಮುತ್ತಲಿನ ಜನರನ್ನು ಸ್ಥಳಾಂತರಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.