ಲೋಕಸಭೆಗೆ ಸಿದ್ಧತೆ: ಮತ್ತೆ ರಾಜ್ಯ ಬಿಜೆಪಿ ನಾಯಕರ ನಡುವೆ ಬುಗಿಲೆದ್ದ ಭಿನ್ನಮತ!
ನ್ಯೂಸ್ ಕನ್ನಡ ವರದಿ: ಭಾರತೀಯ ಜನತಾ ಪಕ್ಷದಿಂದ ಹೊರಹೋಗಿದ್ದವರನ್ನು ಪುನಃ ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಬಿಜೆಪಿಯ ಬೆಂಗಳೂರಿನ ಪ್ರಭಾವಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದ ಮಾಜಿ ಬಿಬಿಎಂಪಿ ಸದಸ್ಯರಾದ ಗೋಪಿ ಮತ್ತು ಶರವಣ ಅವರನ್ನು ಪಕ್ಷಕ್ಕೆ ಕರೆತರಲು ಆರ್.ಅಶೋಕ್ ಮತ್ತು ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ಮುಂದಾಗಿರುವುದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕಣ್ಣು ಕೆಂಪಾಗುವಂತೆ ಮಾಡಿದೆ.
ಇದರಿಂದ ಬೇಸತ್ತಿರುವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಒಂದು ವೇಳೆ ಗೋಪಿ ಮತ್ತು ಶರವಣ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡರೆ ನನಗೆ ಪಕ್ಷದ ಸಹವಾಸವೇ ಬೇಡ. ಲೋಕಸಭೆ ಚುನಾವಣೆಯ ಪ್ರಕ್ರಿಯೆಯಿಂದಲೇ ದೂರ ಉಳಿಯುತ್ತೇನೆ ಎಂದು ಮುಖಂಡರ ಬಳಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಸೋಮವಾರ ರಾಮನಗರದಲ್ಲಿ ನಡೆಯಬೇಕಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮುಖಂಡರ ಸಭೆಯನ್ನು ಮುಂದೂಡಲಾಗಿದೆ. ಈಗಾಗಲೇ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಮಾತನಾಡಿರುವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ವಿರುದ್ಧ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ರೋಷನ್ ಬೇಗ್ ಪರ ಪ್ರಚಾರ ನಡೆಸಿದ ಇವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ನಾಯ್ಡು ಸ್ಪಷ್ಟ ಮಾತುಗಳಲ್ಲೇ ಹೇಳಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆಗಳಿಂದ ಅಸಮಾಧಾನಗೊಂಡಿರುವ ಯಡಿಯೂರಪ್ಪ , ಯಾರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಎಲ್ಲ ಮುಖಂಡರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಯಾರೂ ಕೂಡ ಪಕ್ಷಕ್ಕೆ ಹಾನಿಯಾಗುವಂತಹ ಚಟುವಟಿಕೆಗಳನ್ನು ನಡೆಸಬಾರದೆಂದು ಸೂಚಿಸಿದ್ದಾರೆ.