ವಿಧಾನಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆಗೆ ಟಿಕೆಟ್ ಇಲ್ಲ: ಯಡಿಯೂರಪ್ಪ
ನ್ಯೂಸ್ ಕನ್ನಡ ವರದಿ(09-04-2018): ಈ ಬಾರಿಯ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲಾಗುವುದಿಲ್ಲವೆಂದು ಹೇಳುವ ಮೂಲಕ ಯಡಿಯೂರಪ್ಪ ಈ ಕುರಿತು ಮೂಡಿದ್ದ ಸಂಶಯಗಳಿಗೆ ತೆರೆ ಎಳೆದಿದ್ದಾರೆ.
ಕೆಲವು ದಿನಗಳ ಹಿಂದೆ ಶೋಭಾ ಕರಂದ್ಲಾಜೆ ಯಶ್ವಂತ ಪುರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಕೆಲವು ಮೂಲಗಳು ವರದಿ ಮಾಡಿದ್ದರೆ, ಇನ್ನು ಕೆಲವರು ಶೋಭ ಪುತ್ತೂರಿನಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಹೇಳಿದ್ದರು. ಈಗ ಯಡಿಯೂರಪ್ಪ ಶೋಭ ಕರಂದ್ಲಾಜೆಗೆ ಟಿಕೆಟ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಈ ಎಲ್ಲಾ ಊಹಾಪೋಹಗಳಿಗೆ ತೆರೆಬಿದ್ದಿದೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, 72 ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಎಪ್ರಿಲ್ 11ರಂದು 65 ರಿಂದ 70 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಆದರೆ ಶೋಭಾ ಕರಂದ್ಲಾಜೆಗೆ ವಿಧಾನ ಸಭಾ ಟಿಕೆಟ್ ನೀಡಲಾಗುವುದಿಲ್ಲ ಎಂದರು.