ಬೆಳಗಾವಿಯಲ್ಲಿ ಅಮಿತ್ ಶಾ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ಅನ್ನದಾತರು ! ಹಲವು ರೈತರನ್ನು ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯಲ್ಲಿ ರೈತರು ಪ್ರತಿಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಗೆ ಕೆಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡುತ್ತಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಯವರ ಕಚೇರಿ ಎದುರು ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಹಲವು ಮಂದಿ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳ್ಳಂಬೆಳಿಗ್ಗೆಯೇ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದ ರೈತ ಮುಖಂಡರು, ಕೇಂದ್ರದ ರೈತ ವಿರೋಧಿ ಧೋರಣೆ ವಿರುದ್ಧ ಧಿಕ್ಕಾರ ಕೂಗಿದರು.

ಇಬ್ಬರು ರೈತರು ಅರೆಬೆತ್ತಲೆಯಾಗಿ ಉರುಳುಸೇವೆ ಮಾಡಿದರು. ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.

‘ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಚಳವಳಿ ತೀವ್ರಗೊಂಡಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಬೇಡಿಕೆ ಈಡೇರಿಸಲು ಕ್ರಮ ವಹಿಸಿಲ್ಲ. ರೈತರ ಭವಿಷ್ಯದ ವಿಷಯದಲ್ಲೂ ಸರ್ಕಾರ ಹಟಮಾರಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. ವಿವಾದಿತ ಕಾಯ್ದೆಗಳ ಬಗ್ಗೆ ರೈತರಿಗೆ ಹಲವು ಅನುಮಾನ ಮತ್ತು ಗೊಂದಲಗಳಿವೆ. ಅವುಗಳನ್ನು ಅಮಿತ್ ಶಾ ಇಲ್ಲಿಗೆ ಬಂದು, ನಮ್ಮೊಂದಿಗೆ ಸಂವಾದ ನಡೆಸಿ ಬಗೆಹರಿಸಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ.

ಪ್ರತಿಭಟನೆ ವೇಳೆ ಕೆಲ ರೈತರು ಗೋ ಬ್ಯಾಕ್ ಅಮಿತ್ ಶಾ’ ಎಂದು ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಸ್ಥಳದಲ್ಲಿದ್ದ ಪೊಲೀಸರು ರಾಜ್ಯ ಸಂಚಾಲಕರಾದ ಚೂನಪ್ಪ ಪೂಜಾರಿ, ಜಯಶ್ರೀ ಗುರಣ್ಣವರ, ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ನಾಯ್ಕ, ಮುಖಂಡ ಪ್ರಕಾಶ ನಾಯ್ಕ ಮೊದಲಾದವರನ್ನು ಬಲವಂತವಾಗಿ ಪೊಲೀಸ್ ವಾಹನದಲ್ಲಿ ಕರೆದೊಯ್ದಿದ್ದಾರೆ. ಹೀಗಾಗಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಬಾಯಿ ಬಡೆದುಕೊಂಡು ರೈತರು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿಯವರೆಗೂ ಸುಮಾರು 20 ಕ್ಕೂ ಹೆಚ್ಚು ಜನ ರೈತರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *