ಬಿಜೆಪಿ ಸರ್ಕಾರದ ಆಡಳಿತದಲ್ಲಿ ಶೇ.40ರಷ್ಟು ಕಮಿಷನ್​; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯ: ರಾಜ್ಯಪಾಲರಿಗೆ ದೂರು ನೀಡಿದ ಕಾಂಗ್ರೆಸ್​ ನಿಯೋಗ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಯಾವುದೇ ಕೆಲಸವಾಗಬೇಕಾದರೂ ಶೇ.40ರಷ್ಟು ಕಮಿಷನ್​ ನೀಡಬೇಕು ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಗುತ್ತಿಗೆದಾರ ಕೆಂಬಣ್ಣ ಎಂಬುವರು ಪ್ರಧಾನಿ ಮೋದಿಗೆ ಬರೆದಿರುವ ಪತ್ರವನ್ನು ಆಧರಿಸಿ ಗುರುವಾರ ಕಾಂಗ್ರೆಸ್​ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರು ರಾಜ್ಯಪಾಲರ ಭವನಕ್ಕೆ ತೆರಳಿ ರಾಜ್ಯಪಾಲ ತಾವರ್​ ಚಂದ್​ ಗೆಹ್ಲೋಟ್​ಗೆ ದೂರು ನೀಡಿದರು.

ಸಂವಿಧಾನದ 356ನೇ ಪರಿಚ್ಛೇದದಡಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಮನವಿ ಮಾಡಿದೆ.

ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸರ್ಕಾರಿ ಕಾಮಗಾರಿಗಳ ವೆಚ್ಚದಲ್ಲಿ 40% ಅನ್ನು ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳಿಗೆ ಕಮಿಷನ್ ರೂಪದಲ್ಲಿ ನೀಡಬೇಕಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಹಾಗೂ ಸಂಘದ ಲಕ್ಷಕ್ಕೂ ಅಧಿಕ ಸದಸ್ಯರು ಪ್ರಧಾನಿಗಳಿಗೆ ಬರೆದ ಪತ್ರವೇ ಸಾಕ್ಷಿ.

ರಾಜ್ಯ ಸರ್ಕಾರದ ಕಮಿಷನ್ ದಂಧೆ ಹಾಗೂ ಅಕ್ರಮ ಹಣದ ವರ್ಗಾವಣೆ ಬಗ್ಗೆ ಗುತ್ತಿದಾರರ ಸಂಘ ಪ್ರಧಾನಿಗಳಿಗೆ ಬರೆದ ಪತ್ರದ ಬಗ್ಗೆ ಪತ್ರಿಕೆಗಳು ವರದಿ ಮಾಡಿವೆ. ನಮ್ಮ ಸರ್ಕಾರವನ್ನು 10% ಸರ್ಕಾರ ಎಂದು ಕರೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇದಕ್ಕೇನು ಹೇಳ್ತಾರೆ?

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲೆ ನಡೆಸಿರುವ ಎಸಿಬಿ ದಾಳಿಯಿಂದ ಅಲ್ಲಿನ ಭ್ರಷ್ಟಾಚಾರವೂ ಬಯಲಾಗಿದೆ. ಒಂದು ಅಂದಾಜಿನ ಪ್ರಕಾರ ಬಿಡಿಎ ಭ್ರಷ್ಟಾಚಾರದಿಂದ ಸರ್ಕಾರದ ಖಜಾನೆಗೆ ಸುಮಾರು ರೂ. 300 ಕೋಟಿ ನಷ್ಟವಾಗಿದೆ. ಎಸಿಬಿ ಕಾರ್ಯದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡದೆ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

Leave a Reply

Your email address will not be published. Required fields are marked *