ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ನಿಂದ ಬೃಹತ್ ಸಮಾವೇಶ: ಸಿದ್ದು ಡಿಕೆಶಿ ಸಮಾಗಮ
ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ನೆರೆ ಸಂತ್ರಸ್ತರ ಬಗ್ಗೆ ನಿರ್ಲಕ್ಷ ತೋರುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ನ.5 ರಂದು ಶಿವಮೊಗ್ಗದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಕಾಂಗ್ರೆಸ್ ನಿಂದ ಚೈತನ್ಯ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ.
ಅವರು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 10 ಗಂಟೆಗೆ ಈ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಎಸ್.ಆರ್.ಪಾಟೀಲ್, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೇವಲ ಆಶ್ವಾಸನೆ ಭರವಸೆಗಳನ್ನು ನೀಡುತ್ತಿದೆ. ಜನತೆ ಎದುರಿಸುತ್ತಿರುವ ಸಂಕಷ್ಟಕ್ಕೆ ಪರಿಹರಿಸುವ ಪ್ರಯತ್ನ ಮಾಡುತ್ತಿಲ್ಲ.
ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯತೆಯನ್ನ ವಿರೋಧಿಸಿ ಮತ್ತು ಮುಂಬರುವ ಗ್ರಾಪಂ ಚುನಾವಣೆಯ ದೃಷ್ಠಿಯ ಹಿನ್ನಲೆಯಲ್ಲಿ ಈ ಸಮಾವೇಶ ನಡೆಯಲಿದೆ ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಪ್ರಮುಖರಾದ ರಾಮೇಗೌಡ, ಹೆಚ್.ಎಂ. ಚಂದ್ರಶೇಖರಪ್ಪ, ಇಸ್ಮಾಯಿಲ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.