ಡಿನೋಟಿಫಿಕೇಷನ್‌ ಪ್ರಕರಣ; ಯಡಿಯೂರಪ್ಪ-ಕಟ್ಟಾಗೆ ಸಂಕಷ್ಟ ! ಮುಖ್ಯಮಂತ್ರಿ ಗಾದಿಗೆ ಕಂಟಕ …?

ಬೆಂಗಳೂರು: ನಗರದ ಹೂವಿನಾಯಕನಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿ ಪ್ರಕಾರ ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಜರುಗಿಸಬೇಕು ಎಂದು ಲೋಕಾಯುಕ್ತ ಕೋರ್ಟ್‌ಗೆ ಹೈಕೋರ್ಟ್‌ ಆದೇಶಿಸಿದೆ. ಇದರಿಂದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಡಿನೋಟಿಫಿಕೇಷನ್‌ ಪ್ರಕರಣದಿಂದ ಬಿಎಸ್‌ವೈ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರನ್ನು ಕೈಬಿಟ್ಟು ಲೋಕಾಯುಕ್ತ ಕೋರ್ಟ್‌ ಹೊರಡಿಸಿದ್ದ ಆದೇಶ ರದ್ದು ಕೋರಿ ಉದ್ಯಮಿ ಆಲಂ ಪಾಷಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಪೀಠ ಬುಧವಾರ ವಿಚಾರಣೆ ನಡೆಸಿತು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ”ಈ ಹಿಂದೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿ ಮೇರೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಮುಂದುವರಿಸಬೇಕು,” ಎಂದು ಆದೇಶಿಸಿ ಅರ್ಜಿ ವಿಲೇವಾರಿ ಮಾಡಿತು.

ಪ್ರಕರಣದ ಹಿನ್ನೆಲೆ ಏನು?
ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ನಗರದ ಹೂವಿನಾಯಕನಳ್ಳಿ ಗ್ರಾಮದಲ್ಲಿಕೆಐಎಡಿಬಿ ವಶಪಡಿಸಿಕೊಂಡಿದ್ದ 20 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ ಎಂದು ಆರೋಪಿಸಿ ಉದ್ಯಮಿ ಆಲಂಪಾಷಾ 2011ರ ಆ.20ರಂದು ಲೋಕಾಯುಕ್ತ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ಕುರಿತು ಸಮಗ್ರ ವಿಚಾರಣೆ ನಡೆಸಿದ್ದ ನ್ಯಾಯಾಲಯ ತನಿಖೆ ಮಾಡಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2016ರಲ್ಲಿ 9 ಆರೋಪಿಗಳ ವಿರುದ್ಧ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಆದರೆ ಆರೋಪಿಗಳಾದ ಬಿ ಎಸ್‌ ಯಡಿಯೂರಪ್ಪ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಮಾತ್ರ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಕೋರ್ಟ್‌ 2016ರ ಜು. 25ರಂದು ಆರೋಪಿಗಳ ವಿರುದ್ಧ ಕಾಗ್ನಿಜೆನ್ಸ್‌ (ಒಪ್ಪಿಗೆ) ತೆಗೆದುಕೊಳ್ಳಲು ನಿರಾಕರಿಸಿ, ಆರೋಪಪಟ್ಟಿ ರದ್ದುಪಡಿಸಿತ್ತು.

Leave a Reply

Your email address will not be published. Required fields are marked *